ಬೆಂಗಳೂರು: ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲೇ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಮಾರುಕಟ್ಟೆಗಳು ಸೇರಿದಂತೆ ಜನ ನಿಬಿಡ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಿ ತೀವ್ರ ನಿಗಾ ವಹಿಸಲಾಗಿದೆ.
ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಅನುಮಾನಾಸ್ಪದವಾಗಿ ಕಂಡು ಬರುವ ಪ್ರಯಾಣಿಕರು ಹಾಗೂ ಅವರ ಲಗೇಜುಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ವಿಧಾನಸೌಧ, ಹೈಕೋರ್ಟ್, ವಿಕಾಸಸೌಧ, ಬಹುಮಹಡಿ ಕಟ್ಟಡ, ಸಿಟಿ ಸಿವಿಲ್ ಕೋರ್ಟ್, ವಿಶ್ವೇಶ್ವರಯ್ಯ ಟವರ್ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಿ ನಿಗಾವಹಿಸಲಾಗಿದೆ.