ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರವನ್ನು ಮೊದಲ ಹಂತದಲ್ಲಿ ಸವಣೂರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಹಾಗೂ ಮಾರ್ಗಸೂಚಿ ಅನ್ವಯ ಗುಣಮಟ್ಟದ ಹೆಸರುಕಾಳು ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬೇಡಿಕೆಗೆ ಅನುಗುಣವಾಗಿ
ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರಿಗೆ ಸೂಚಿಸಿದರು. ಬೆಂಬಲ ಬೆಲೆ: ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಪ್ರತಿ ಕ್ವಿಂಟ್ ರೂ.8,692ರಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಆಗಸ್ಟ್ 21 ರಿಂದ 45 ದಿನಗಳವರೆಗೆ
ರೈತರ ನೋಂದಣಿ ಆರಂಭಿಸಿ, 90 ದಿನಗಳವರೆಗೆ ಖರೀದಿಸಬೇಕು. ಖರೀದಿ ಕೇಂದ್ರದ ಮುಂದೆ ಬ್ಯಾನರ್
ಅಳವಡಿಸಬೇಕು. ಕರಪತ್ರಗಳ ಮೂಲಕ ರೈತರಿಗೆ ಖರೀದಿ ಕೇಂದ್ರದ ಮಾಹಿತಿ ನೀಡಲು ಸೂಚನೆ ನೀಡಿದರು. ಖರೀದಿ ಕೇಂದ್ರ: ಹೆಸರುಕಾಳು ಖರೀದಿ ಕೇಂದ್ರವನ್ನು ಸವಣೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ತೆರೆಯಲು ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು. ಸವಣೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ
ರೈತರಿಂದ ಖರೀದಿಸಲ್ಪಡುವ ಹೆಸರುಕಾಳಿನ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಗುರುತಿಸಲು ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಸಿಬ್ಬಂದಿಗಳನ್ನು ಖರೀದಿ ಕೇಂದ್ರಗಳಿಗೆ ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಬಲ ಬೆಲೆಯಡಿ ಹೆಸರುಕಾಳು ಪ್ರತಿ ರೈತರಿಂದ ಹೆಸರುಕಾಳು ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ ಎರಡು ಕ್ವಿಂಟಲ್‌ನಂತೆ ಹಾಗೂ ಪ್ರತಿಯೊಬ್ಬ ರೈತರಿಂದ 10 ಕ್ವಿಂಟಲ್ ಖರೀದಿಗೆ ಅವಕಾಶವಿದೆ. ಹೆಸರುಕಾಳು ಖರೀದಿ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ
ಡಿಬಿಟಿ ಮೂಲಕ ಜಮೆ ಮಾಡಬೇಕು ಎಂದು ಸಲಹೆ ನೀಡಿದರು.ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 585 ಹೆಕ್ಟೇರ್ ಪ್ರದೇಶದಲ್ಲಿ ಹೆಸರಕಾಳು ಬೆಳೆಯಲಾಗಿದೆ. ಸವಣೂರ ತಾಲೂಕಿನಲ್ಲಿ 420 ಹೆಕ್ಟೇರ್ ಹಾಗೂ ರಾಣೀಬೆನ್ನೂರ ತಾಲೂಕಿನಲ್ಲಿ 90 ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಉತ್ಪನ್ನ ಬೆಳೆಯಲಾಗಿದೆ ಎಂದರು.ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.