
ವಾಲ್ಮೀಕಿ ಸಮಾಜದಿಂದ ಅದ್ದೂರಿ ಜಯಂತಿ ಆಚರಣೆ ಚಿಂತನೆ
ಹಾವೇರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ಸಮಾಜದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವ ಭರವಸೆ ಸಿಕ್ಕ ಹಿನ್ನೆಲೆ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ವಾಲ್ಮೀಕಿ ಮಹಾಸಭಾದ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,
ರಾಜ್ಯದ ವಾಲ್ಮೀಕಿ ಜನಾಂಗದ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿರಿಸಿದ್ದ 187 ಕೋಟಿ ರೂಪಾಯಿ ದುರ್ಬಳಕೆ ಆಗಿದೆ.ಇದರಿಂದ ಸಮಾಜವನ್ನು ಕಡೆಗಣಿಸಲಾಗಿದೆ.ಈ ವಿಚಾರಗಳನ್ನು ಸಿಎಂ ಅವರ ಗಮನಕ್ಕೆ ತಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ ಅ. ೧೭ ರಂದು ನಡೆಯಲಿರುವ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು ತಿಳಿಸಿದರು.
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಬಗ್ಗೆ ಜಿಲ್ಲಾಡಳಿತ, ತಾಲೂಕಾ ಆಡಳಿತ ಕರೆದ ಪೂರ್ವಬಾವಿ ಸಭೆಗಳಲ್ಲಿ ವಾಲ್ಮೀಕಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸಮಾಜದ ಮುಖಂಡರು ಸರ್ಕಾರ ಆಚರಿಸುವ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದರು.ಈ ಬಗ್ಗೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ನಮ್ಮ ಸಮಾಜದ ರಾಜ್ಯ, ಜಿಲ್ಲೆಯ, ತಾಲೂಕುಗಳ ಪ್ರಮುಖರು, ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಅ.9.ರಂದು ಭೇಟಿಯಾಗಿ ನಮ್ಮ ಸಮಾಜದ ಬೇಡಿಕೆಗಳ ಬಗ್ಗೆ ಗಮನ ಸೆಳೆಯಲಾಯಿತು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದೆ ಎನ್ನಲಾದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು, ತಳವಾರ ಹೆಸರಿನಲ್ಲಿ ನಕಲಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ಪಡೆಯುತ್ತಿರುವದನ್ನು ತಡೆಯಲು ಅಗತ್ಯ ಕ್ರಮವಹಿಸಲು ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಭಿವೃದ್ಧಿ ನಿಗಮದಲ್ಲಿ ದುರ್ಬಳಕೆ ಯಾದ 187.ಕೋಟಿ ರೂ. ಜತೆಗೆ, ಅಭಿವೃದ್ಧಿಗೆ ಹೆಚ್ಚಿನ ಹಣ ನೀಡುವ ಜತೆಗೆ ಎಲ್ಲ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಯಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ರಮೇಶ ಆನವಟ್ಟಿ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರಾದ ನ್ಯಾಯವಾದಿಗಳಾದ ಬಸವರಾಜ್ ಹಾದಿಮನಿ,ಶೇಖರ ಕಳ್ಳಿಮನಿ, ಅಶೋಕ ಹರನಗಿರಿ, ಕೃಷ್ಣ ಜವಳಿ, ನಾಗರಾಜ ಬಡಮ್ಮನವರ ಇದ್ದರು.