ಹಾವೇರಿ: ಸತತ ಮಳೆಯಿಂದ ತಾಲೂಕಿನಲ್ಲಿ ಸಂಭವಿಸುವ ಮನೆಹಾನಿ, ಬೆಳೆ ಹಾನಿ ಹಾಗೂ ಡೆಂಗಿ ಪ್ರಕರಣಗಳ ಬಗ್ಗೆ ತೀವ್ರ ನಿಗಾವಹಿಸಬೇಕು ಹಾಗೂ ನೆರೆ ಪೀಡಿತ ಪ್ರದೇಶಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಬ್ಯಾಡಗಿ ತಾಲೂಕು ಕಚೇರಿಯಲ್ಲಿ ಶುಕ್ರವಾರ ವಿಪತ್ತು ನಿರ್ವಹಣೆ ಹಾಗೂ ಮಳೆಯಿಂದ ಮನೆಹಾನಿ. ಬೆಳೆಹಾನಿ ಹಾಗೂ ಡೆಂಗಿ ನಿಯಂತ್ರಣ ಕುರಿತು ಸಭೆ ನಡೆಸಿದ ಅವರು, ಶಿಥಿಲಗೊಂಡ ಮಣ್ಣಿನ ಮನೆಗಳಲ್ಲಿ ವಾಸಿಸುವರನ್ನು ತಾತ್ಕಾಲಿಕ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಗ್ರಾಮಗಳಲ್ಲಿ ಈ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ನೀಡಬೇಕು ಎಂದು ಸೂಚನೆ ನೀಡಿದರು.
ಮಳೆಯಿಂದ ಹಾನಿ ಕುರಿತು ಸಾರ್ವಜನಿಕರ ದೂರುಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು ಹಾಗೂ ಪರಿಹಾರ ವಿತರಣೆ ಅಗತ್ಯ ಕ್ರಮಕೈಗೊಳ್ಳಬೇಕು. ಜೊತೆಗೆ ಡೆಂಗಿ ನಿಯಂತ್ರಣಕ್ಕೆ ಸಾರ್ವಜನಿಕರಿಗೆ ಆರೋಗ್ಯ ಅರಿವು ಮೂಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತರೊಂದಿಗೆ ಸಭೆ: ನಂತರ ರೈತ ಸಂಘದ ಮುಖಂಡರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ರೈತರ
ಸಮಸ್ಯೆಗಳ ಕುರಿತು ಚರ್ಚಿಸಿದರು. ಉಪವಿಭಾಗಾಧಿಕಾರಿ ಚೆನ್ನಪ್ಪ, ಬ್ಯಾಡಗಿ ತಹಶೀಲ್ದಾರ, ಆರೋಗ್ಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.